YouVersion Logo
Search Icon

ಮತ್ತಾಯ 7

7
1ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವದಿಲ್ಲ. 2ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು. 3ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯೋಚಿಸುವದೇಕೆ? 4ನೀನು ನಿನ್ನ ಸಹೋದರನಿಗೆ - ನಿನ್ನ ಕಣ್ಣಿನೊಳಗಿಂದ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದು ಹೇಗೆ? ನಿನ್ನ ಕಣ್ಣಿನಲ್ಲಿ ತೊಲೆಯದೆಯಲ್ಲಾ. 5ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ; ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿಂದ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.
6ದೇವರ ವಸ್ತುವನ್ನು ನಾಯಿಗಳಿಗೆ ಹಾಕಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಚೆಲ್ಲಿದರೆ ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
7ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ನಿಮಗೆ ತೆರೆಯುವದು; 8ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು. 9ನಿಮ್ಮಲ್ಲಿ ಯಾವನಾದರೂ ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೇ? 10,11ಮೀನು ಕೇಳಿದರೆ ಹಾವನ್ನು ಕೊಡುವನೇ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ.
12ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.
13ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ. 14ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
15ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ. 16ಅವರ ಫಲಗಳಿಂದ ಅವರನ್ನು ತಿಳುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷೇಹಣ್ಣುಗಳನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರಗಳನ್ನೂ ಕೊಯ್ಯುವದುಂಟೇ? 17ಹಾಗೆಯೇ ಒಳ್ಳೇ ಮರಗಳೆಲ್ಲಾ ಒಳ್ಳೇ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವದು. 18ಒಳ್ಳೇ ಮರವು ಕೆಟ್ಟ ಫಲವನ್ನು ಕೊಡಲಾರದು; ಹುಳುಕು ಮರವು ಒಳ್ಳೇ ಫಲವನ್ನು ಕೊಡಲಾರದು. 19ಒಳ್ಳೇ ಫಲವನ್ನು ಕೊಡದ ಎಲ್ಲಾ ಮರಗಳನ್ನು ಕಡಿದು ಬೆಂಕಿಯಲ್ಲಿ ಹಾಕುತ್ತಾರೆ. 20ಹೀಗಿರಲಾಗಿ ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ.
21ನನ್ನನ್ನು ಸ್ವಾಮೀ, ಸ್ವಾಮೀ ಅನ್ನುವವರೆಲ್ಲರು ಪರಲೋಕರಾಜ್ಯದಲ್ಲಿ ಸೇರುವರೆಂದು ನೆನಸಬೇಡಿರಿ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ಪರಲೋಕರಾಜ್ಯಕ್ಕೆ ಸೇರುವನು. 22ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು. 23ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.
24ಆದದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಯುಳ್ಳ ಮನುಷ್ಯನನ್ನು ಹೋಲುವನು. 25ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ. 26ಆದರೆ ಈ ನನ್ನ ಮಾತುಗಳನ್ನು ಕೇಳಿಯೂ ಅವುಗಳಂತೆ ನಡೆಯದ ಪ್ರತಿಯೊಬ್ಬನು ಉಸುಬಿನ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿಹೀನ ಮನುಷ್ಯನನ್ನು ಹೋಲುವನು. 27ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಅದು ಧಡಮ್ಮನೆ ಕಡುಕೊಂಡು ಬಿತ್ತು.
28ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪುಗಳು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟವು. 29ಯಾಕಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶ ಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.

Highlight

Share

Copy

None

Want to have your highlights saved across all your devices? Sign up or sign in