ಮತ್ತಾಯ 6:25-34
ಮತ್ತಾಯ 6:25-34 KANJV-BSI
ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? ಚಿಂತೆಮಾಡಿಮಾಡಿ ಒಂದು ಮೊಳ ಉದ್ದ ಬೆಳೆಯುವದು ನಿಮ್ಮಲ್ಲಿ ಯಾರಿಂದಾದೀತು? ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ; ಆದಾಗ್ಯೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ. ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ. ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ. ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ. ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು. ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು.