YouVersion Logo
Search Icon

ಮತ್ತಾಯ 1

1
ಯೇಸುಸ್ವಾಮಿಯ ವಂಶಾವಳಿ
(ಲೂಕ. 3:23-38)
1ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:
2ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು. 3ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು. 4ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್, 5ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ, 6ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್, 7ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು. 8ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು. 9ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು. 10ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, 11ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.
12ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್, 13ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು. 14ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್, 15ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು. 16ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ#1:16 ಗೌರವಾರ್ಥ, ಅಧ್ಯಾಯಗಳ ಆದಿಯಲ್ಲಿ ಹಾಗೂ ಶಿರೋನಾಮಗಳ ಅಡಿಯಲ್ಲಿ ಮೊಟ್ಟಮೊದಲಬಾರಿಗೆ ಬರುವ ‘ಯೇಸು’ ಎಂಬ ಪದಕ್ಕೆ; ‘ಸ್ವಾಮಿ’ ಎಂಬ ಪ್ರತ್ಯಯವನ್ನು ಹಚ್ಚಲಾಗಿದೆ. ಹುಟ್ಟಿದ್ದು;
17ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.
ಪ್ರಭುಯೇಸುವಿನ ಜನನ
(ಲೂಕ. 2:1-7)
18ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ. 19ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು. 20ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ. 21ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.
22“ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು
‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು”
ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು. 23“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ. 24ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು. 25ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.

Highlight

Share

Copy

None

Want to have your highlights saved across all your devices? Sign up or sign in