YouVersion Logo
Search Icon

ಮತ್ತಾಯ 10

10
ಪ್ರೇಷಿತರ ಪಟ್ಟಿ
(ಮಾರ್ಕ. 3:13-19; ಲೂಕ. 6:12-16)
1ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು. 2ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ; 3ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ; 4ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.
ಶಿಷ್ಯರಿಗಿತ್ತ ಆದೇಶ
(ಮಾರ್ಕ. 6:7-13; ಲೂಕ. 9:1-6)
5ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ. 6ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ; 7ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ. 8ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ. 9ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ, 10ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.
11“ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ. 12ನೀವು ಒಂದು ಮನೆಗೆ ಹೋದಾಗ, “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ. 13ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ. 14ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ. 15ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.
ಶಿಷ್ಯರು ಸಹಿಸಬೇಕಾದ ಸಂಕಷ್ಟಗಳು
(ಮಾರ್ಕ. 13:9-13; ಲೂಕ. 21:12-17)
16“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ. 17ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು. 18ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. 19ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು. 20ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು. 21ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು. 22ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು. 23ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ. 24ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ. 25ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’#11:25 ‘ಬೆಲ್ಜೆಬೂಲ್’ ಎಂದರೆ ‘ಪಿಶಾಚಿಗಳ ಒಡೆಯ’. ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”
ಶಿಷ್ಯರು ನಿರ್ಭೀತರಾಗಿರಬೇಕು
(ಲೂಕ. 12:2-7)
26“ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು. 27ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ. 28ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ. 29ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ. 30ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. 31ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.
ಬಹಿರಂಗ ಸಾಕ್ಷ್ಯ
(ಲೂಕ. 12:8-9)
32“ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. 33ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.
ಬಂಧು ಭೇದ
(ಲೂಕ. 12:51-53; 14:26-27)
34“ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ, ಛೇದಿಸುವ ಖಡ್ಗವನ್ನು ತರಲು ಬಂದೆನು. 35ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ, ಅತ್ತೆಗೆ ವಿರುದ್ಧ ಸೊಸೆಗೂ ಭೇದಹುಟ್ಟಿಸಲು ಬಂದೆನು; 36ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು.
37“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. 38ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ. 39ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ.
ಸತ್ಕಾರಕ್ಕೆ ತಕ್ಕ ಸಂಭಾವನೆ
(ಮಾರ್ಕ. 9:41)
40“ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ. 41ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. 42ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”

Highlight

Share

Copy

None

Want to have your highlights saved across all your devices? Sign up or sign in