YouVersion Logo
Search Icon

ಮಾರ್ಕ 12

12
ಕೃತಘ್ನ ಗೇಣಿದಾರರ ಸಾಮತಿ
(ಮತ್ತಾ. 21:33-46; ಲೂಕ. 20:9-19)
1ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ. 2ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ. 3ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು. 4ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು. 5ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು. 6ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ. 7ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ, 8ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು. 9ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ :
10-11ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ
ಪ್ರಮುಖ ಮೂಲೆಗಲ್ಲಾಯಿತು;
ಸರ್ವೇಶ್ವರನಿಂದಲೇ ಆದ ಈ ಕಾರ್ಯ
ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!
ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು. 12ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.
ಸರಕಾರಕ್ಕೆ ಸಲ್ಲತಕ್ಕದ್ದನ್ನು ಸರಕಾರಕ್ಕೇ ಸಲ್ಲಿಸು
(ಮತ್ತಾ. 22:15-22; ಲೂಕ. 20:20-26)
13ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು. 14ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು. 15ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು. 16ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು. 17ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.
ಸತ್ತವರು ಪುನರುತ್ಥಾನ ಆಗುವುದುಂಟೇ?
(ಮತ್ತಾ. 22:23-33; ಲೂಕ. 20:27-40)
18ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲವೆಂಬುದು ಇವರ ಅಭಿಮತ. ಇವರು ಯೇಸುವನ್ನು, 19“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ? 20ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು. 21ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸಾವನ್ನಪ್ಪಿದ. ಮೂರನೆಯವನಿಗೂ ಇದೇ ಗತಿಯಾಯಿತು. 22ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣಹೊಂದಿದಳು. 23ಈಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು. 24ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ. 25ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ. 26ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ? 27ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.
ಪ್ರಧಾನ ಆಜ್ಞೆ ಯಾವುದು?
(ಮತ್ತಾ. 22:34-40; ಲೂಕ. 10:25-28)
28ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು. 29ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ; 30ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ. 31“ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು. 32ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ; 33ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು. 34ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.
ಯೇಸು ದಾವೀದನಿಗೆ ಮಗನೋ ಅಥವಾ ಪ್ರಭುವೋ?
(ಮತ್ತಾ. 22:41-46; ಲೂಕ. 20:41-44)
35ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು?
36‘ನಿನ್ನ ಶತ್ರುಗಳನ್ನು ನಾನು
ನಿನ್ನ ಪಾದದಡಿಗೆ ಹಾಕುವತನಕ
ನನ್ನ ಬಲಗಡೆಯಲ್ಲಿ ಆಸೀನನಾಗಿರು
ಎಂದು ನನ್ನ ಪ್ರಭುವಿಗೆ
ಸರ್ವೇಶ್ವರ ಹೇಳಿದ್ದಾರೆ,’
ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ! 37ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.
ಕಪಟಶಾಸ್ತ್ರಜ್ಞರ ಬಗ್ಗೆ ಎಚ್ಚರಿಕೆ!
(ಮತ್ತಾ. 23:1-36; ಲೂಕ. 20:45-47)
38ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ, 39“ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ. 40ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.
ಬಡವಿಧವೆಯ ಉದಾರ ಕಾಣಿಕೆ
(ಲೂಕ. 21:1-4)
41ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು. 42ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು. 43ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ; 44ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.

Currently Selected:

ಮಾರ್ಕ 12: KANCLBSI

Highlight

Share

Copy

None

Want to have your highlights saved across all your devices? Sign up or sign in