ರೂತ 1
1
ರೂತಳು ಅತ್ತೆಯೊಡನೆ ಯೆಹೂದ ದೇಶಕ್ಕೆ ಬಂದದ್ದು
1ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು. 2ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ 3ನವೊಮಿಯ ಗಂಡನಾದ ಎಲೀಮೆಲೆಕನು ಮರಣ ಹೊಂದಿದನು. ಆಕೆಯು ಇಬ್ಬರು ಮಕ್ಕಳೊಡನೆ ಅಲ್ಲಿಯೇ ಉಳಿದಳು. 4ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು. 5ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.
6ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು. 7ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ 8ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ. 9ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು. 10ಆಗ ಅವರು ಬಹಳ ದುಃಖದಿಂದ ಗಟ್ಟಿಯಾಗಿ ಅತ್ತು ನಾವೂ ನಿನ್ನ ಜೊತೆಯಲ್ಲೇ ನಿನ್ನ ಸ್ವಜನರ ಬಳಿಗೆ ಬರುತ್ತೇವೆ ಅನ್ನಲು, 11ಆಕೆಯು, “ನನ್ನ ಮಕ್ಕಳೇ, ನೀವು ನನ್ನೊಡನೆ ಬರುವುದೇಕೆ? ಹಿಂದಿರುಗಿ ಹೋಗಿರಿ. ನಿಮಗೆ ಗಂಡಂದಿರನ್ನು ಕೊಡುವುದಕ್ಕೆ ನನ್ನ ಗರ್ಭದಲ್ಲಿ ಬೇರೆ ಮಕ್ಕಳಿಲ್ಲವಲ್ಲಾ. 12ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ಆ ನಿರೀಕ್ಷೆಯಿಂದ ಈ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ, 13ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು. 14ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು. 15ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ, 16ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. 17ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು. 18ಆಕೆಯು ತನ್ನ ಜೊತೆಯಲ್ಲಿ ಬರುವುದಕ್ಕೆ ನಿರ್ಧರಿಸಿದ್ದಾಳೆಂದು ನವೊಮಿಯು ತಿಳಿದು ಸುಮ್ಮನಾದಳು. 19ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು 20ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ. 21ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು.
22ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.
Currently Selected:
ರೂತ 1: IRVKan
Highlight
Share
Copy
Want to have your highlights saved across all your devices? Sign up or sign in
KAN-IRV
Creative Commons License
Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.