YouVersion Logo
Search Icon

ಆದಿಕಾಂಡ 12

12
ದೇವರು ಅಬ್ರಾಮನನ್ನು ಕರೆದದ್ದು
1ಯೆಹೋವನು ಅಬ್ರಾಮನಿಗೆ,
“ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು.
ನಿನ್ನ ತಂದೆಯ ಕುಟುಂಬವನ್ನು ಬಿಟ್ಟು
ನಾನು ತೋರಿಸುವ ದೇಶಕ್ಕೆ ಹೋಗು.
2ನಾನು ನಿನ್ನನ್ನು ಆಶೀರ್ವದಿಸುವೆನು;
ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ
ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು;
ನೀನು ಆಶೀರ್ವಾದದಾಯಕನಾಗುವಂತೆ#12:2 ಆಶೀರ್ವಾದದಾಯಕ ಜನರು ಬೇರೆಯವರನ್ನು ನಿನ್ನ ಹೆಸರಿನಿಂದ ಆಶೀರ್ವದಿಸುವರು ಎಂಬರ್ಥವನ್ನೂ ಇದು ಕೊಡಬಲ್ಲದು. ಮಾಡುವೆನು.
3ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು;
ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು.
ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ
ಆಶೀರ್ವಾದ ಹೊಂದುವರು” ಎಂದು ಹೇಳಿದನು.
ಕಾನಾನಿಗೆ ಅಬ್ರಾಮನ ಪ್ರಯಾಣ
4ಆದ್ದರಿಂದ ಅಬ್ರಾಮನು ಯೆಹೋವನಿಗೆ ವಿಧೇಯನಾದನು. ಅವನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟನು. ಅವನೊಡನೆ ಲೋಟನು ಸಹ ಹೋದನು. ಆಗ ಅಬ್ರಾಮನಿಗೆ ಎಪ್ಪತ್ತೈದು ವರ್ಷ ವಯಸ್ಸಾಗಿತ್ತು. 5ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು. 6ಅಬ್ರಾಮನು ಕಾನಾನ್ ದೇಶದಲ್ಲಿ ಪ್ರಯಾಣವನ್ನು ಮುಂದುವರಿಸಿದನು. ಅವನು ಶೆಕೆಮ್ ನಗರವನ್ನು ತಲುಪಿ, ಅಲ್ಲಿಂದ ಮೋರೆ ಎಂಬ ದೊಡ್ಡ ಓಕ್ ಮರವಿದ್ದ ಸ್ಥಳಕ್ಕೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ದೇಶದಲ್ಲಿ ವಾಸವಾಗಿದ್ದರು.
7ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು.
ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. 8ಆಮೇಲೆ ಅಬ್ರಾಮನು ಆ ಸ್ಥಳದಿಂದ ಹೊರಟು ಬೇತೇಲಿಗೆ ಪೂರ್ವದಲ್ಲಿರುವ ಗುಡ್ಡಗಳ ಬಳಿಗೆ ಪ್ರಯಾಣ ಮಾಡಿದನು. ಅಲ್ಲಿ ಅಬ್ರಾಮನು ತನ್ನ ಗುಡಾರಗಳನ್ನು ಹಾಕಿದನು. ಪಶ್ಚಿಮಕ್ಕೆ ಬೇತೇಲ್ ಪಟ್ಟಣವಿತ್ತು, ಪೂರ್ವಕ್ಕೆ ಆಯಿ ಪಟ್ಟಣವಿತ್ತು. ಆ ಸ್ಥಳದಲ್ಲಿ ಅವನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಕೆಯನ್ನು ಕಟ್ಟಿ ಅಲ್ಲಿ ಅವನು ಯೆಹೋವನನ್ನು ಆರಾಧಿಸಿದನು. 9ತರುವಾಯ ಅವನು ಮತ್ತೆ ಪ್ರಯಾಣವನ್ನು ಮುಂದುವರಿಸಿ ನೆಗೆವ್ ಸ್ಥಳದ ಕಡೆಗೆ ಹೋದನು.
ಈಜಿಪ್ಟಿನಲ್ಲಿ ಅಬ್ರಾಮ
10ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು. 11ತನ್ನ ಹೆಂಡತಿ ಸಾರಯಳು ರೂಪವತಿಯಾಗಿರುವುದು ಅಬ್ರಾಮನಿಗೆ ತಿಳಿದಿತ್ತು. ಆದ್ದರಿಂದ ಈಜಿಪ್ಟಿಗೆ ಹೋಗುವ ಮೊದಲೇ, ಅಬ್ರಾಮನು ಸಾರಯಳಿಗೆ, “ನೀನು ರೂಪವತಿಯೆಂದು ನನಗೆ ಗೊತ್ತಿದೆ. 12ಈಜಿಪ್ಟಿನ ಗಂಡಸರು ನಿನ್ನನ್ನು ನೋಡಿ, ‘ಈಕೆ ಇವನ ಹೆಂಡತಿ’ ಎಂದು ತಿಳಿದು ನಿನ್ನನ್ನು ಪಡೆದುಕೊಳ್ಳುವುದಕ್ಕಾಗಿ ನನ್ನನ್ನು ಕೊಂದು ನಿನ್ನನ್ನು ಜೀವಂತವಾಗಿ ಉಳಿಸುವರು. 13ಆದ್ದರಿಂದ ನೀನು ನನಗೆ ತಂಗಿಯಾಗಬೇಕೆಂದು ಜನರಿಗೆ ಹೇಳು. ಆಗ ಅವರು ನನ್ನನ್ನು ನಿನ್ನ ಸಹೋದರನೆಂದು ಭಾವಿಸಿ ನನ್ನನ್ನು ಕೊಲ್ಲದೆ ನನಗೆ ದಯೆತೋರುವರು. ಹೀಗೆ ನೀನು ನನ್ನ ಪ್ರಾಣ ಉಳಿಸುವೆ” ಎಂದು ಹೇಳಿದನು.
14ಅಂತೆಯೇ ಅಬ್ರಾಮನು ಈಜಿಪ್ಟಿಗೆ ಹೋದನು. ಈಜಿಪ್ಟಿನ ಗಂಡಸರು ಸಾರಯಳನ್ನು ಕಂಡು ಈಕೆ ತುಂಬ ರೂಪವತಿ ಎಂದರು. 15ಈಜಿಪ್ಟಿನ ಕೆಲವು ನಾಯಕರು ಸಹ ಆಕೆಯನ್ನು ಕಂಡರು. ಅವರು ಫರೋಹನ ಬಳಿಗೆ ಹೋಗಿ ಆಕೆಯ ಅಮೋಘ ಸೌಂದರ್ಯವನ್ನು ತಿಳಿಸಿದರು. ಬಳಿಕ ಆ ನಾಯಕರು ಸಾರಯಳನ್ನು ಫರೋಹನ ಬಳಿಗೆ ಕರೆದೊಯ್ದರು. 16ಅಬ್ರಾಮನು ಸಾರಯಳ ಸಹೋದರನೆಂದು ಭಾವಿಸಿ ಫರೋಹನು ಅಬ್ರಾಮನಿಗೆ ದಯೆತೋರಿದನು. ಫರೋಹನು ಅಬ್ರಾಮನಿಗೆ ದನಕುರಿಗಳನ್ನೂ ಕತ್ತೆಗಳನ್ನೂ ಕೊಟ್ಟನು. ಅಲ್ಲದೆ ಅಬ್ರಾಮನಿಗೆ ದಾಸದಾಸಿಯರನ್ನೂ ಒಂಟೆಗಳನ್ನೂ ಕೊಟ್ಟನು.
17ಫರೋಹನು ಅಬ್ರಾಮನ ಹೆಂಡತಿಯನ್ನು ತೆಗೆದುಕೊಂಡದ್ದರಿಂದ ಯೆಹೋವನು ಫರೋಹನಿಗೂ ಅವನ ಮನೆಯಲ್ಲಿದ್ದವರಿಗೂ ಭಯಂಕರವಾದ ರೋಗಗಳನ್ನು ಬರಮಾಡಿದನು. 18ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ತುಂಬ ಕೆಟ್ಟದ್ದನ್ನು ಮಾಡಿರುವೆ; ಸಾರಯಳು ನಿನಗೆ ಹೆಂಡತಿಯಾಗಬೇಕೆಂದು ಯಾಕೆ ತಿಳಿಸಲಿಲ್ಲ? 19‘ಈಕೆ ನನಗೆ ತಂಗಿಯಾಗಬೇಕು’ ಎಂದು ಯಾಕೆ ಹೇಳಿದೆ? ನೀನು ಹೀಗೆ ಹೇಳಿದ್ದರಿಂದ ನಾನು ಆಕೆಯನ್ನು ನನ್ನ ಹೆಂಡತಿಯಾಗಲಿಕ್ಕೆ ತೆಗೆದುಕೊಂಡೆ. ಆದರೆ ಈಗ ನಾನು ನಿನ್ನ ಹೆಂಡತಿಯನ್ನು ಮತ್ತೆ ನಿನಗೇ ಕೊಡುತ್ತೇನೆ. ನೀನು ಆಕೆಯನ್ನು ನಿನ್ನೊಂದಿಗೆ ಕರೆದುಕೊಂಡು ಹೊರಟುಹೋಗು” ಎಂದು ಹೇಳಿದನು. 20ಆಮೇಲೆ ಫರೋಹನು ತನ್ನ ಜನರಿಗೆ ಅಬ್ರಾಮನನ್ನು ಈಜಿಪ್ಟಿನಿಂದ ಕಳುಹಿಸಿಕೊಡಬೇಕೆಂದು ಆಜ್ಞಾಪಿಸಿದನು. ಆದ್ದರಿಂದ ಅಬ್ರಾಮನು ಮತ್ತು ಅವನ ಹೆಂಡತಿ ಆ ಸ್ಥಳದಿಂದ ಹೊರಟುಹೋದರು; ಅವರು ತಮ್ಮೊಡನೆ ಇದ್ದವುಗಳನ್ನೆಲ್ಲ ತೆಗೆದುಕೊಂಡು ಹೋದರು.

Highlight

Share

Copy

None

Want to have your highlights saved across all your devices? Sign up or sign in