ಮಾರ್ಕನ ಸುವಾರ್ತೆ 15
15
ಪಿಲಾತನಿಂದ ಯೇಸುವಿನ ವಿಚಾರಣೆ
(ಮತ್ತಾಯ 27:1-2,11-14; ಲೂಕ 23:1-5; ಯೋಹಾನ 18:28-38)
1ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.
2ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು.
ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.
3ಮಹಾಯಾಜಕರು ಯೇಸುವಿನ ಮೇಲೆ ಅನೇಕ ತಪ್ಪುಗಳನ್ನು ಹೊರಿಸಿದರು. 4ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.
5ಆದರೆ ಯೇಸು ಮೌನವಾಗಿದ್ದನು. ಪಿಲಾತನಿಗೆ ಇದರಿಂದ ಬಹಳ ಆಶ್ಚರ್ಯವಾಯಿತು.
ಯೇಸುವನ್ನು ಬಿಡಿಸಲು ಪಿಲಾತನು ಮಾಡಿದ ವಿಫಲ ಪ್ರಯತ್ನ
(ಮತ್ತಾಯ 27:15-31; ಲೂಕ 23:13-25; ಯೋಹಾನ 18:39–19:16)
6ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು. 7ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.
8ಜನರು ಪಿಲಾತನ ಬಳಿಗೆ, ಎಂದಿನಂತೆ ತಮಗಾಗಿ ಒಬ್ಬ ಕೈದಿಯನ್ನು ಬಿಡುಗಡೆ ಮಾಡಬೇಕೆಂದು ಕೇಳಿದರು. 9ಪಿಲಾತನು ಜನರಿಗೆ, “ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ಬಯಸುತ್ತೀರಾ?” ಎಂದು ಕೇಳಿದನು. 10ಮಹಾಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಬಂಧಿಸಿ ತನಗೆ ಒಪ್ಪಿಸಿದ್ದಾರೆಂಬುದು ಪಿಲಾತನಿಗೆ ತಿಳಿದಿತ್ತು. 11ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.
12ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.
13ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಆರ್ಭಟಿಸಿದರು.
14ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು.
ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.
15ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.
16ಪಿಲಾತನ ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ಕೊಂಡೊಯ್ದು ಇತರ ಸೈನಿಕರನ್ನೆಲ್ಲಾ ಒಟ್ಟಿಗೆ ಕರೆದರು. 17ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. 18ನಂತರ ಅವರು ಯೇಸುವಿಗೆ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ!” ಎಂದರು. 19ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು. 20ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.
ಶಿಲುಬೆಗೇರಿಸಲ್ಪಟ್ಟ ಯೇಸು
(ಮತ್ತಾಯ 27:32-44; ಲೂಕ 23:26-43; ಯೋಹಾನ 19:17-27)
21ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು. 22ಅವರು ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದರು. (ಗೊಲ್ಗೊಥ ಎಂದರೆ “ಕಪಾಲ ಸ್ಥಳ.”) 23ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ. 24ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.
25ಅವರು ಯೇಸುವನ್ನು ಶಿಲುಬೆಗೇರಿಸಿದಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು. 26ಯೇಸುವಿನ ವಿರುದ್ಧ ಮಾಡಲಾದ ಆಪಾದನೆಯನ್ನು ಅಂದರೆ “ಯೆಹೂದ್ಯರ ರಾಜ” ಎಂದು ಶಿಲುಬೆಯ ಮೇಲೆ ಬರೆಯಲಾಗಿತ್ತು. 27ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು. 28#15:28 ಕೆಲವು ಗ್ರೀಕ್ ಪ್ರತಿಗಳಲ್ಲಿ 28ನೇ ವಚನವನ್ನು ಸೇರಿಸಲಾಗಿದೆ: “ಆತನು ಅಧರ್ಮಿಗಳ ಸಂಗಡ ಎಣಿಸಲ್ಪಟ್ಟನು” ಎಂಬ ಶಾಸ್ತ್ರ ವಚನವು ಹೀಗೆ ನೆರವೇರಿತು.
29ಅಲ್ಲಿ ನಡೆದುಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ. 30ಈಗ ಶಿಲುಬೆಯಿಂದ ಕೆಳಗಿಳಿದು ಬಂದು ನಿನ್ನನ್ನು ರಕ್ಷಿಸಿಕೊ!” ಎಂದು ಅಪಹಾಸ್ಯ ಮಾಡಿದರು.
31ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. 32ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.
ಯೇಸುವಿನ ಮರಣ
(ಮತ್ತಾಯ 27:45-56; ಲೂಕ 23:44-49; ಯೋಹಾನ 19:28-30)
33ಮಧ್ಯಾಹ್ನವಾದಾಗ, ಇಡೀ ದೇಶವೇ ಕತ್ತಲಾಯಿತು. ಈ ಕತ್ತಲೆಯು ಸಾಯಂಕಾಲ ಮೂರು ಗಂಟೆಯವರೆಗೆ ಇತ್ತು. 34ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?”#ಕೀರ್ತನೆ 22:1. ಎಂಬುದೇ ಇದರರ್ಥ.
35ಅಲ್ಲಿ ನಿಂತಿದ್ದ ಕೆಲವು ಜನರು ಇದನ್ನು ಕೇಳಿ, “ನೋಡಿ! ಆತನು ಎಲೀಯನನ್ನು ಕರೆಯುತ್ತಿದ್ದಾನೆ” ಎಂದರು.
36ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, “ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.
37ನಂತರ ಯೇಸು ಮಹಾಧ್ವನಿಯಿಂದ ಕೂಗಿ, ಪ್ರಾಣಬಿಟ್ಟನು.
38ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಎರಡು ಭಾಗಗಳಾಗಿ ಹರಿದುಹೋಯಿತು. 39ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.
40ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.) 41ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.
ಯೇಸುವಿನ ಸಮಾಧಿ
(ಮತ್ತಾಯ 27:57-61; ಲೂಕ 23:50-56; ಯೋಹಾನ 19:38-42)
42ಆಗ ಕತ್ತಲಾಗತೊಡಗಿತ್ತು. ಅಂದು ಸಿದ್ಧತೆಯ ದಿನವಾಗಿದ್ದರಿಂದ (ಅಂದರೆ ಸಬ್ಬತ್ತಿನ ಹಿಂದಿನ ದಿನ), 43ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.
44ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು. 45ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.
46ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು. 47ಮಗ್ದಲದ ಮರಿಯಳು ಹಾಗೂ ಯೋಸೆಯನ ತಾಯಿಯಾದ ಮರಿಯಳು ಸಮಾಧಿ ಮಾಡಿದ ಸ್ಥಳವನ್ನು ಗುರುತಿಸಿಕೊಂಡರು.
Currently Selected:
ಮಾರ್ಕನ ಸುವಾರ್ತೆ 15: KERV
Highlight
Share
Copy

Want to have your highlights saved across all your devices? Sign up or sign in
Kannada Holy Bible: Easy-to-Read Version
All rights reserved.
© 1997 Bible League International