ಯೊವಾನ್ನ 15

15
ನೈಜ ದ್ರಾಕ್ಷಾಬಳ್ಳಿ
1“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ. 2ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು. 3ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ. 4ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.
5“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು. 6ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.
7“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು. 8ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು. 9ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ. 10ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
11“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ. 12ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು. 13ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ. 14ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು. 15ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ. 16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು. 17ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.
ದ್ವೇಷದಿಂದ ಕೂಡಿದ ಲೋಕ
18“ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ. 19ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ. 20ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು. 21ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು. 22ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ. 23ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ. 24ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ. 25“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ. 26ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು. 27ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.

های‌لایت

به اشتراک گذاشتن

کپی

None

می خواهید نکات برجسته خود را در همه دستگاه های خود ذخیره کنید؟ برای ورودثبت نام کنید یا اگر ثبت نام کرده اید وارد شوید