ಯೋಹಾನನ ಸುವಾರ್ತೆ 9
9
ಯೇಸು ಹುಟ್ಟು ಕುರುಡನನ್ನು ಗುಣಪಡಿಸುವನು
1ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು. 2ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.
3ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ. 4ನನ್ನನ್ನು ಕಳುಹಿಸಿದಾತನ ಕಾರ್ಯವನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬರುತ್ತದೆ. ಆಗ ಯಾವನೂ ಕೆಲಸ ಮಾಡಲಾರನು. 5ನಾನು ಈ ಲೋಕದಲ್ಲಿರುವಾಗ, ನಾನೇ ಈ ಲೋಕಕ್ಕೆ ಬೆಳಕಾಗಿದ್ದೇನೆ” ಎಂದು ಹೇಳಿದನು.
6ಯೇಸು ಈ ಮಾತನ್ನು ಹೇಳಿದ ಮೇಲೆ ನೆಲದ ಮೇಲೆ ಉಗುಳಿ ಅದರಿಂದ ಕೆಸರನ್ನು ಮಾಡಿಕೊಂಡು ಆ ಮನುಷ್ಯನ ಕಣ್ಣುಗಳಿಗೆ ಹಚ್ಚಿದನು. 7ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ ತೊಳೆದುಕೊ” ಎಂದು ಹೇಳಿದನು. (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.
8ಈ ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು, “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.
9ಕೆಲವು ಜನರು, “ಹೌದು ಅವನೇ” ಎಂದು ಹೇಳಿದರು. ಇನ್ನು ಕೆಲವರು, “ಇಲ್ಲ, ಇವನು ಆ ಮನುಷ್ಯನಲ್ಲ. ಇವನು ಅವನಂತಿದ್ದಾನಷ್ಟೇ” ಎಂದು ಹೇಳಿದರು.
ಅದಕ್ಕೆ ಆ ಮನುಷ್ಯನು, “ನಾನೇ ಅವನು” ಎಂದು ಹೇಳಿದನು.
10ಜನರು, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.
11ಆ ಮನುಷ್ಯನು, “ಯೇಸು ಎಂಬವನು ಸ್ವಲ್ಪ ಕೆಸರನ್ನು ಮಾಡಿ ನನ್ನ ಕಣ್ಣುಗಳಿಗೆ ಹಚ್ಚಿ, ಸಿಲೋವ ಕೊಳಕ್ಕೆ ಹೋಗಿ ತೊಳೆದುಕೊಳ್ಳಲು ಹೇಳಿದನು. ಅಂತೆಯೇ ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
12ಜನರು ಆ ಮನುಷ್ಯನಿಗೆ, “ಆ ವ್ಯಕ್ತಿ ಎಲ್ಲಿದ್ದಾನೆ?” ಎಂದು ಕೇಳಿದರು.
ಆ ಮನುಷ್ಯನು, “ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.
ಗುಣಹೊಂದಿದ ವ್ಯಕ್ತಿಗೆ ಫರಿಸಾಯರಿಂದ ವಿಚಾರಣೆ
13ಬಳಿಕ ಜನರು ಆ ಮನುಷ್ಯನನ್ನು ಫರಿಸಾಯರ ಬಳಿಗೆ ಕರೆದು ತಂದರು. ಮೊದಲು ಕುರುಡನಾಗಿದ್ದವನು ಅವನೇ. 14ಯೇಸು ಕೆಸರು ಮಾಡಿ ಅವನ ಕಣ್ಣುಗಳನ್ನು ಗುಣಪಡಿಸಿದ್ದನು. ಯೇಸು ಈ ಕಾರ್ಯವನ್ನು ಮಾಡಿದ್ದು ಸಬ್ಬತ್‌ದಿನದಲ್ಲಿ. 15ಆದ್ದರಿಂದ ಅವರು ಆ ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು.
ಆ ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
16ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು.
ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.
17ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು.
ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
18ಈ ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆತಾಯಿಗಳನ್ನು ಕರೆಯಿಸಿದರು. 19ಅವರು ಅವನ ತಂದೆತಾಯಿಗಳಿಗೆ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೆಂದು ನೀವು ಹೇಳುತ್ತೀರಿ. ಹಾಗಾದರೆ ಇವನಿಗೆ ಈಗ ಹೇಗೆ ಕಣ್ಣು ಕಾಣಿಸುತ್ತದೆ?” ಎಂದು ಕೇಳಿದರು.
20ತಂದೆತಾಯಿಗಳು, “ಇವನು ನಮ್ಮ ಮಗನೆಂದು ನಮಗೆ ಗೊತ್ತು. ಇವನು ಹುಟ್ಟುಕುರುಡನೆಂಬುದೂ ನಮಗೆ ಗೊತ್ತು. 21ಆದರೆ ಈಗ ಅವನಿಗೆ ಹೇಗೆ ಕಣ್ಣು ಕಾಣಿಸುತ್ತದೆಯೋ ಯಾರು ಗುಣಪಡಿಸಿದರೋ ನಮಗೆ ತಿಳಿಯದು. ಅವನನ್ನೇ ಕೇಳಿ. ಇವನು ತನ್ನ ವಿಷಯವಾಗಿ ಹೇಳುವಷ್ಟು ಪ್ರಾಯಸ್ಥನಾಗಿದ್ದಾನೆ” ಎಂದು ಉತ್ತರಕೊಟ್ಟರು. 22ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು. 23ಆದಕಾರಣವೇ ಅವನ ತಂದೆತಾಯಿಗಳು, “ಅವನು ಪ್ರಾಯಸ್ಥನಾಗಿದ್ದಾನೆ. ಅವನನ್ನೇ ಕೇಳಿ” ಎಂದು ಹೇಳಿದರು.
24ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.
25ಆ ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
26ಯೆಹೂದ್ಯನಾಯಕರು, “ಅವನು (ಯೇಸು) ನಿನಗೇನು ಮಾಡಿದನು? ಅವನು ನಿನ್ನ ಕಣ್ಣುಗಳನ್ನು ಹೇಗೆ ಗುಣಪಡಿಸಿದನು?” ಎಂದು ಕೇಳಿದರು.
27ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು.
28ಯೆಹೂದ್ಯನಾಯಕರು ಕೋಪಗೊಂಡು ಆ ಮನುಷ್ಯನನ್ನು ಅಪಹಾಸ್ಯಮಾಡಿ, “ನೀನು ಅವನ (ಯೇಸು) ಹಿಂಬಾಲಕನಾಗಿರುವೆ. ನಾವು ಮೋಶೆಯ ಹಿಂಬಾಲಕರಾಗಿದ್ದೇವೆ. 29ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.
30ಆ ಮನುಷ್ಯನು, “ಇದು ಬಹು ಆಶ್ಚರ್ಯಕರವಾದ ಸಂಗತಿ. ಯೇಸು ಎಲ್ಲಿಂದ ಬಂದನೆಂಬುದು ನಿಮಗೆ ಗೊತ್ತಿಲ್ಲ. ಆದರೆ ಆತನು ನನ್ನ ಕಣ್ಣುಗಳನ್ನು ಗುಣಪಡಿಸಿದನು. 31ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ. 32ಹುಟ್ಟುಕುರುಡನೊಬ್ಬನನ್ನು ಯಾರಾದರೂ ಎಂದಾದರೂ ಗುಣಪಡಿಸಿರುವುದು ಇದೇ ಮೊದಲನೆ ಸಲ. 33ಆ ಮನುಷ್ಯನು (ಯೇಸು) ದೇವರಿಂದಲೇ ಬಂದಿರಬೇಕು. ಆತನು ದೇವರಿಂದ ಬಂದಿಲ್ಲದಿದ್ದರೆ, ಇಂಥ ಕಾರ್ಯಗಳನ್ನು ಮಾಡಲಾಗುತ್ತಿರಲಿಲ್ಲ” ಎಂದು ಉತ್ತರಕೊಟ್ಟನು.
34ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.
ಆತ್ಮಿಕ ಅಂಧತೆ
35ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.
36ಆ ಮನುಷ್ಯನು, “ಸ್ವಾಮೀ, ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು. ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದು ಹೇಳಿದನು.
37ಯೇಸು, “ನೀನು ಆತನನ್ನು ಈಗಾಗಲೇ ನೋಡಿರುವೆ. ಈಗ ನಿನ್ನೊಂದಿಗೆ ಮಾತಾಡುತ್ತಿರುವಾತನೇ ಮನುಷ್ಯಕುಮಾರನು” ಎಂದು ಹೇಳಿದನು.
38ಆ ಮನುಷ್ಯನು, “ಹೌದು ಪ್ರಭುವೇ, ನಾನು ನಂಬುತ್ತೇನೆ!” ಎಂದು ಉತ್ತರಕೊಟ್ಟನು. ಬಳಿಕ ಅವನು ಯೇಸುವಿಗೆ ಅಡ್ಡಬಿದ್ದು ಆರಾಧಿಸಿದನು.
39ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.
40ಅಲ್ಲಿದ್ದ ಫರಿಸಾಯರು ಇದನ್ನು ಕೇಳಿ, “ಏನು? ನಮ್ಮನ್ನು ಸಹ ಕುರುಡರೆಂದು ಹೇಳುತ್ತಿರುವೆಯಾ?” ಎಂದು ಪ್ರಶ್ನಿಸಿದರು.
41ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.
Valið núna:
ಯೋಹಾನನ ಸುವಾರ್ತೆ 9: KERV
Áherslumerki
Deildu
Afrita
Want to have your highlights saved across all your devices? Sign up or sign in
Kannada Holy Bible: Easy-to-Read Version
All rights reserved.
© 1997 Bible League International